ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ರಾಜ್ಯ ಬಜೆಟ್ 2024-25ಗೆ ಸಚಿವರ ಪ್ರತಿಕ್ರಿಯೆ | ‘ದೂರದೃಷ್ಟಿಯುಳ್ಳ ಅಭಿವೃದ್ಧಿ ಪರ ಬಜೆಟ್’

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ ಬಜೆಟ್ 2024-25ಗೆ ಸಚಿವರು ಪ್ರತಿಕ್ರಿಯೆ ನೀಡಿ 'ದೂರದೃಷ್ಟಿಯುಳ್ಳ ಅಭಿವೃದ್ಧಿ ಪರ ಬಜೆಟ್'ಎಂದಿದ್ದಾರೆ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ 15 ನೇ ಆಯವ್ಯಯ ಐತಿಹಾಸಿಕ ಬಜೆಟ್ ಆಗಿದ್ದು,‌‌ ದೂರದೃಷ್ಟಿಯುಳ್ಳ ಅಭಿವೃದ್ಧಿಗೆ ಪೂರಕವಾದ ಬಜೆಟ್ ಎಂದು ಕನ್ನಡ ಮತ್ತು ಸಂಸ್ಖೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಹೇಳಿದ್ದಾರೆ.

ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವರು, ಬಜೆಟ್ ಆರ್ಥಿಕ ಶಿಸ್ತಿನಿಂದ ಕೂಡಿದ್ದು, ಆಶಾದಾಯಕ ಬಜೆಟ್ ಆಗಿದೆ. ಮುಖ್ಯಮಂತ್ರಿಗಳು ಪ್ರಸಕ್ತ ಸಾಲಿನಲ್ಲಿ ಐದು ಗ್ಯಾರಂಟಿಗಳಿಗೆ 52 ಸಾವಿರ ಕೋಟಿ ಮೀಸಲಿಟ್ಟಿದ್ದು, ಬಡವರ, ದೀನದಲಿತರ, ಅಲ್ಪಸಂಖ್ಯಾತರ ಅಭಿವೃದ್ಧಿ ಬಜೆಟ್ ಮಂಡಿಸಿದ್ದಾರೆ ಎಂದು ಶ್ಲಾಘಿಸಿದರು.

ದೇಶದ ಪ್ರತಿಷ್ಠಿತ ಇಂಜಿನಿಯರಿಂಗ್ ಹಾಗೂ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು ಪ್ರಸಕ್ತ ಸಾಲಿನಲ್ಲಿ 500 ಪ್ರತಿಭಾವಂತ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ತರಬೇತಿ ಸಂಸ್ಥೆಗಳಿಂದ ಎರಡು ವರ್ಷ ಉಚಿತ ಜೆಇಇ/ಎನ್ಇಇಟಿ ತರಬೇತಿ ನೀಡುವ ಯೋಜ ಘೋಷಣೆ ಮಾಡಿರುವುದು ಸ್ವಾಗತರ್ಹ.

ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಆರ್ಥಿಕ ಹಾಗೂ ಸಾಮಾಜಿಕ ಸ್ಥಿತಿಗತಿಗಳ ಅಧ್ಯಯನಕ್ಕೆ ‘ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಆಯೋಗ ರಚನೆ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಸಿಎಲ್ಎಟಿ, ಎಂಎಟಿ ಮತ್ತು ಚಾರ್ಟೆಡ್‌ ಅಕೌಂಟೆಂಟ್ ಫೌಂಡೇಶನ್ ಪರೀಕ್ಷೆಗಳಿಗೆ ಸಿದ್ಧಗೊಳಿಸಲು ಪರೀಕ್ಷಾ ಪೂರ್ವ ತರಬೇತಿ ನೀಡುವ ಯೋಜನೆ ಉಪಯುಕ್ತವಾಗಿದೆ ಎಂದಿದ್ದಾರೆ.

ಬಸವಣ್ಣನವರ ಜನ್ಮಸ್ಥಳ ಅಭಿವೃದ್ಧಿಗೆ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆ, ಬಸವಣ್ಣ ಹಾಗೂ ಇತರ ಶರಣರ ವಚನಗಳನ್ನು ವಿಶ್ವಕ್ಕೆ ಪರಿಚಯಿಸುವ ವಚನ ಮಂಟಪ ಕಲ್ಬುರ್ಗಿಯಲ್ಲಿ ಸ್ಥಾಪನೆ, ಅಲೆಮಾರಿ ಮತ್ತು ಅರೆಅಲೆಮಾರಿ ಸಮುದಾಯದವರ ಕಲೆ ಮತ್ತು ಸಂಸ್ಕೃತಿಯನ್ನು ಗುರುತಿಸಿ, ಉಳಿಸಿ, ಪ್ರೊತ್ಸಾಹಿಸುವ ನಿಟ್ಟಿನಲ್ಲಿ‌ ಅಲೆಮಾರಿ ಸಂಸ್ಕೃತಿ ಉತ್ಸವದಂತಹ ಯೋಜನೆಯನ್ನು ಘೋಷಣೆ ಮಾಡಿರುವುದು ಸಂತಸದ ವಿಚಾರ.

ಹಿರೇಕೆರೂರಿನಲ್ಲಿ ಸರ್ವಜ್ಞನ ಸ್ಮಾರಕ ಅಭಿವೃದ್ಧಿ ಹಾಗೂ ರಾಜ್ಯ ಮಾಜಿ ಮುಖ್ಯಮಂತ್ರಿ ದಿ.ಎಸ್.ಬಂಗಾರಪ್ಪನವರ ಸ್ಮಾರಕ ನಿರ್ಮಾಣ ಮಾಡುವ ಬಗ್ಗೆ ಪ್ರಸ್ತಾಪಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಚಿವರು ಅಭಿನಂದನೆ ತಿಳಿಸಿದ್ದಾರೆ.

ಒಟ್ಟಾರೆ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ನಲ್ಲಿ ರೈತ ಪರ, ಕೃಷಿ ವಲಯ, ಶಿಕ್ಷಣ, ಆರೋಗ್ಯ, ಕೈಗಾರಿಕೆ, ತಂತ್ರಜ್ಞಾನ, ಉದ್ಯೋಗ ಸೃಷ್ಟಿ, ಹಿಂದುಳಿದ ವರ್ಗಗಳ ಕಲ್ಯಾಣ, ಬಂಡವಾಳ ಹೂಡಿಕೆ, ಮೂಲಸೌಲಭ್ಯ ಅಭಿವೃದ್ಧಿ, ಮಹಿಳಾ ಸಬಲೀಕರಣ, ಯುವಜನರ ಶ್ರೇಯೋಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ದೂರದೃಷ್ಟಿಯುಳ್ಳ ಅಭಿವೃದ್ಧಿಗೆ ಪೂರಕವಾದ ಬಜೆಟ್ ಆಗಿದೆ ಎಂದು ತಿಳಿಸಿದ್ದಾರೆ.

ಇನ್ನು ಗ್ಯಾರಂಟಿಗಳು ಬಹುಕಾಲ ಇರುವುದಿಲ್ಲ ಎಂದು ಟೀಕೆ ಮಾಡುತ್ತಿದ್ದ ಬಿಜೆಪಿಗರಿಗೆ ನಮ್ಮ‌ ಸರ್ಕಾರದ ಅಭಿವೃದ್ಧಿ ಪರ ಬಜೆಟ್ ನ್ನು ಸಹಿಸಲು ಸಾಧ್ಯವಾಗುತ್ತಿಲ್ಲ. ಕೇಂದ್ರ ಸರ್ಕಾರದ ರಾಜ್ಯ ಪಾಲಿನ ತೆರಿಗೆ ಹಣ ಕೊಡದೆ ಅನ್ಯಾಯವೆಸಗುತ್ತಿರುವುದನ್ನೆಲ್ಲ ಜನರ ಮುಂದೆ ಎಳೆಎಳೆಯಾಗಿ ಬಿಚ್ಚಿಡುತ್ತಿದ್ದೇವೆ. ಇದನ್ನು ಸಹಿಸಲು ಸಾಧ್ಯವಾಗದ ರಾಜ್ಯ ಬಿಜೆಪಿ ನಾಯಕರು ಇಲ್ಲದ ನಾಟಕವಾಡುತ್ತಿದ್ದಾರೆ ಎಂದು ಸಚಿವ‌ ಶಿವರಾಜ್ ತಂಗಡಗಿ ಅವರು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ಇದೊಂದು ಅಭಿವೃದ್ಧಿ ಪರ ಬಜೆಟ್: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌

ಐತಿಹಾಸಿಕ ಹಾಗೂ ರಚನಾತ್ಮಕ ಬಜೆಟ್ ಮಂಡಿಸಿದ್ದು, ರಾಜ್ಯದ ಅಭಿವೃದ್ಧಿಗೆ ಪೂರಕವಾಗಿದೆ. ಎಲ್ಲಾ ವರ್ಗದವರಿಗೆ ಸಲ್ಲುವ ಬಜೆಟ್ ಇದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌ ಮುಖ್ಯಮಂತ್ರಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ‌. 2024-25ನೇ ಸಾಲಿನಲ್ಲಿ ಮಹಿಳಾ ಉದ್ದೇಶಿತ ಯೋಜನೆಗಳಿಗೆ 86,423 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಇಲಾಖೆಯ ಬಹುತೇಕ ಬೇಡಿಕೆಗಳಿಗೆ ಮುಖ್ಯಮಂತ್ರಿಗಳು ಸ್ಪಂದಿಸಿದ್ದಾರೆ. ಮಕ್ಕಳ ಉದ್ದೇಶಿತ ಯೋಜನೆಗಳಿಗೆ ಬಜೆಟ್‌ನಲ್ಲಿ 54,617 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದರು.

ಪ್ರಸಕ್ತ ಸಾಲಿನಲ್ಲಿ ಇಲಾಖೆ ನಿರೀಕ್ಷಿಸಿದಷ್ಟು ಬಜೆಟ್‌ ದಕ್ಕಿದ್ದು, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಗೃಹಲಕ್ಷ್ಮಿಗೆ ಈ ಸಾಲಿನಲ್ಲಿ 28,608 ಕೋಟಿ ರೂ. ಒದಗಿಸಲಾಗಿದೆ. ಇದರಿಂದ ಕುಟುಂಬ ನಿರ್ವಹಣೆಯ ಜೊತೆಗೆ ಆದಾಯೋತ್ಪನ್ನ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಮಹಿಳೆಯರಿಗೆ ಈ ಯೋಜನೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಸ್ಮಾರ್ಟ್‌ ಫೋನ್‌ಗಳಿಗೆ 90 ಕೋಟಿ
ಅಂಗನವಾಡಿ ಕಾರ್ಯಕರ್ತೆಯರ ಮತ್ತು ಮೇಲ್ವಿಚಾರಕಿಯರ ಬಹುದಿನಗಳ ಬೇಡಿಕೆಯಾಗಿದ್ದ ಸ್ಮಾರ್ಟ್ ಫೋನ್‌ಗಾಗಿ 90 ಕೋಟಿ ರೂಪಾಯಿ ನೀಡಲಾಗಿದೆ. 90 ಕೋಟಿ ರೂ. ವೆಚ್ಚದಲ್ಲಿ 75,938 ಫೋನ್‌ಗಳನ್ನ ನೀಡಲಾಗುತ್ತಿದ್ದು, ಇದರಿಂದ ಅಂಗನವಾಡಿ ಮೂಲಕ ಕೈಗೊಳ್ಳುವ ಚಟುವಟಿಕೆಗಳನ್ನು ಸುಗಮಗೊಳ್ಳಲಿದೆ. ಮಕ್ಕಳ ಪ್ರಾರಂಭಿಕ ಶಿಕ್ಷಣ ಮತ್ತು ಆರೈಕೆಯಲ್ಲಿ ಸಾಮರ್ಥ್ಯ ಅಭಿವೃದ್ಧಿಗೆ 20,000 ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸಲು 10 ಕೋಟಿ ರೂ. ಗಳನ್ನು ಒದಗಿಸಲಾಗಿದೆ ಎಂದು ಸಚಿವರು ಹರ್ಷ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1,000 ಅಂಗನವಾಡಿಗಳಿಗೆ ಸ್ವಂತ ಕಟ್ಟಡಗಳನ್ನು 200 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು. ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಸವಲತ್ತುಗಳನ್ನು ನೀಡಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದರು. ಒಟ್ಟಾರೆ ಇದೊಂದು ಅತ್ಯಂತ ಸಮತೋಲಿತ, ಅಭಿವೃದ್ಧಿ ಪರ ಬಜೆಟ್ ಎಂದು ಹೆಬ್ಬಾಳಕರ್ ಪ್ರಶಂಸಿಸಿದ್ದಾರೆ.

10 ವರ್ಷಗಳ ದೂರದೃಷ್ಟಿ ಹೊಂದಿರುವ ಪ್ರಗತಿಶೀಲ ಬಜೆಟ್: ಸಚಿವ ಎನ್ ಎಸ್ ಭೋಸರಾಜು

ವಿದ್ಯಾರ್ಥಿಗಳಿಗೆ ಟೆಲಿಸ್ಕೋಪ್, ಸೈನ್ಸ್ ಸಿಟಿ ಸ್ಥಾಪನೆ, ನೀರಿನ ಸದ್ಬಳಕೆ ಹಾಗೂ ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ ನೀಡುವಂತಹ ಮತ್ತು ಎಲ್ಲಾ ವರ್ಗದ ಜನರ ಆಶೋತ್ತರಗಳಿಗೆ ಧ್ವನಿಯಾಗುವಂತಹ ಕ್ರಾಂತಿಕಾರಿ ಆಯವ್ಯಯವನ್ನ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಮಂಡಿಸಿದ್ದಾರೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ಹೇಳಿದ್ದಾರೆ.

ಸರ್ವೋದಯ ದೃಷ್ಟಿ ಮತ್ತು ಸಮನ್ವಯ ದೃಷ್ಟಿ ಎಲ್ಲೆಡೆ ತಾಂಡವವಾಡಬೇಕು, ನಿಷ್ಪಕ್ಷಪಾತ ಮತ್ತು ನ್ಯಾಯಯತ ಸಮಾಜ ನಿರ್ಮಾಣಕ್ಕಾಗಿ ಸಂಪತ್ತಿನ ಮರುಹಂಚಿಕೆ ಮಾಡುವುದು ಇಂದಿನ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಚುನಾವಣೆಗೂ ಮುನ್ನ ಘೋಷಿಸಿದ್ದ 5 ಗ್ಯಾರೆಂಟಿ ಯೋಜನೆಗಳನ್ನ ಚಾಚೂ ತಪ್ಪದೆ ಅನುಷ್ಠಾನಗೊಳಿಸಿ ಇಡೀ ದೇಶದಲ್ಲಿ ಮಾದರಿ ರಾಜ್ಯವಾಗಿದ್ದೇವೆ. ಬಸವಣ್ಣವರ ಆಶಯದಂತೆ ನುಡಿದಂತೆ ನಡೆದ ಸರಕಾರ ನಮ್ಮದಾಗಿದೆ. ಈ ಬಾರಿ ಬಜೆಟ್ ನಲ್ಲಿ 52 ಸಾವಿರ ಕೋಟಿ ಗ್ಯಾರೆಂಟಿ ಯೋಜನೆಗಳಿಗೆ ಅನುದಾನ ನೀಡಿದ್ದು, ಇಡೀ ದೇಶದಲ್ಲೆ ನಮ್ಮ ಸರಕಾರ ಮಾದರಿಯಾಗಿ ಹೊರಹೊಮ್ಮಿದೆ.

ನಮ್ಮದು ಮುಂದಿನ 10 ವರ್ಷಗಳ ದೂರದೃಷ್ಟಿಯನ್ನು ಹೊಂದಿರುವಂತಹ ಅಭಿವೃದ್ದಿ ಪೂರಕ ಬಜೆಟ್ ಆಗಿದೆ. ಗ್ಯಾರೆಂಟಿಗಳಿಗೆ ಅನುದಾನ ನೀಡಿದ ಮೇಲೂ ಆರ್ಥಿಕ ಸುಸ್ಥಿತಿಯನ್ನ ನಿಭಾಯಿಸಿ ಗ್ಯಾರೆಂಟಿಗಳ ಜೊತೆ ಅಗತ್ಯ ಅಭಿವೃದ್ದಿಗೆ ಯಾವುದೇ ಕೊರತೆ ಮಾಡದೇ ಇರುವಂತಹ ಪ್ರಗತಿಶೀಲ ಬಜೆಟನ್ನ ನಮ್ಮ ಮುಖ್ಯಮಂತ್ರಿಗಳೂ ಮಂಡಿಸಿದ್ದಾರೆ. ಈ ಮೂಲಕ ಇಡೀ ದೇಶಕ್ಕೇ ಕರ್ನಾಟಕ ಮಾದರಿ ಆಡಳಿತನ್ನ ಕೊಡುಗೆಯಾಗಿ ನೀಡಿದ್ದಾರೆ. ಅಭಿವೃದ್ದಿಯ ಜೊತೆ ಜನಕಲ್ಯಾಣದ ಬದ್ದತೆಯನ್ನು ಹೊಂದಿರುವುದೇ “ಕರ್ನಾಟಕ ಮಾಡೆಲ್” ಆಡಳಿತವಾಗಿದೆ.

ಗ್ಯಾರೆಂಟಿಗಳ ಜೊತೆಯಲ್ಲೆ ಹಿಂದೆಂದೂ ನೀಡಿದಷ್ಟು ಅನುದಾನವನ್ನ ಅಭಿವೃದ್ದಿ ಕಾರ್ಯಗಳಿಗೆ ನೀಡುವ ಮೂಲಕ ಈ ಆಯವ್ಯಯವು ನಮ್ಮ ರಾಜ್ಯದ ಮುಂದಿನ ನಡೆಯನ್ನು ನಿರೂಪಿಸುತ್ತದೆ. ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕ ನ್ಯಾಯ ಮತ್ತು ಅಭಿವೃದ್ದಿ ಪರ್ವವನ್ನು ಒಳಗೊಂಡ ಕರ್ನಾಟಕದ ಅಭಿವೃದ್ದಿಯನ್ನು ಮುಂದಿನ ಒಂದು ದಶಕಕ್ಕೆ ನಿಚ್ಚಳಗೊಳಿಸಿದೆ.

ರಾಜ್ಯದ ಯುವ ಸಮುದಾಯ ಮತ್ತು ಸಾರ್ವಜನಿಕರಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ಅರಿವನ್ನ ಹೆಚ್ಚಿಸುವ ನಿಟ್ಟಿನಲ್ಲಿ ಆದ್ಯತೆಯನ್ನ ನೀಡಿರುವ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ಬ್ಯಾಹ್ಯಾಕಾಶದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಮೂಡಿಸುವ ಉದ್ದೇಶದಿಂದ ಟೆಲಿಸ್ಕೋಪ್ ನೀಡುವ ಯೋಜನೆಯನ್ನ ಘೋಷಿಸಿದ್ದಾರೆ. ಮೊದಲ ಹಂತದಲ್ಲಿ 833 ವಸತಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ತಲಾ ಒಂದು ದೂರದರ್ಶಕವನ್ನು ನೀಡಲು 3 ಕೋಟಿ ಅನುದಾನ ನೀಡಿದ್ದಾರೆ. ಇದು ಇಲಾಖೆಯ ಮಹತ್ವದ ಯೋಜನೆಯಾಗಿದ್ದು ವೈಜ್ಞಾನಿಕ ಮನೋಭಾವ, ವೈಜ್ಞಾನಿಕತೆಯೆಡೆಗೆ ಹೆಚ್ಚಿನ ಒಲವು ಮೂಡಿಸುವ ಗುರಿಯನ್ನು ಹೊಂದಿದೆ.

ಬೆಂಗಳೂರು ನಗರದಲ್ಲಿ ಕೇಂದ್ರ ಸರಕಾರದ ಸಹಭಾಗಿತ್ವದಲ್ಲಿ ಒಟ್ಟು 233 ಕೋಟಿ ವೆಚ್ಚದಲ್ಲಿ ವಿಜ್ಙಾನ ನಗರಿ (Science city) ಸ್ಥಾಪನೆಯ ಘೋಷಣೆ ಮತ್ತು ಶಿವಮೊಗ್ಗ, ರಾಯಚೂರು, ಚಿಕ್ಕಮಗಳೂರು, ಯಾದಗಿರಿ ಮತ್ತು ಮೈಸೂರಿನಲ್ಲಿ ವಿಜ್ಞಾನ ಹಾಗೂ ತಾರಾಲಯ ಕೇಂದ್ರಗಳ ಸ್ಥಾಪನೆಗೆ 170 ಕೋಟಿ ಸೇರಿದಂತೆ ಹಲವು ಯೋಜನೆಗಳನ್ನ ಘೋಷಿಸಿರುವುದಕ್ಕೆ ಸಚಿವರು ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ರಾಯಚೂರು ನಗರದಲ್ಲಿ ಏಮ್ಸ್ ಸ್ಥಾಪನೆ ಸೇರಿದಂತೆ ಮೂಲಭೂತ ಸೌಕರ್ಯಗಳನ್ನ ಅಭಿವೃದ್ದಿ ಪಡಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಎಲ್ಲ ಸಹಕಾರ ನೀಡುತ್ತಿದೆ. ನಮ್ಮ ರಾಯಚೂರು ಜಿಲ್ಲೆ ಮಹತ್ವಾಕಾಂಕ್ಷಿ ಜಿಲ್ಲೆಯಾಗಿ ಕೇಂದ್ರ ಸರ್ಕಾರದ ಮಾನ್ಯತೆ ಪಡೆದಿದೆ. ಆದರೂ ಹಿಂದಿನ ಬಿಜೆಪಿ ಸರ್ಕಾರ ರಾಯಚೂರಿಗೆ ನಿರಂತರ ಅನ್ಯಾಯ ಎಸಗಿದೆ. ಈ ಎಲ್ಲಾ ಅನ್ಯಾಯಗಳಿಗೆ ಉತ್ತರ ಎಂಬಂತೆ ಇಂದಿನ ಬಜೆಟ್ ಭಾಷಣದಲ್ಲಿ ರಾಯಚೂರು ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ಕಾಂಗ್ರೆಸ್ ಸರಕಾರ ಒತ್ತು ನೀಡಿದೆ. ಪ್ರಮುಖವಾಗಿ ಬಹುದಿನಗಳ ಬೇಡಿಕೆಯಾಗಿದ್ದ ವಿಮಾನ ನಿಲ್ದಾಣ, ಜವಳಿ ಪಾರ್ಕ್, ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಪಾಮನಕಲ್ಲೂರು ಹಾಗೂ ಇತರ ಪ್ರದೇಶಗಳಿಗೆ ನಾರಾಯಣಪುರ ಬಲದಂಡೆ ಕಾಲುವೆಯಿಂದ ಅಂದಾಜು 990 ಕೋಟಿ ರೂ. ಮೊತ್ತದಲ್ಲಿ ನೀರಾವರಿ ಸೌಲಭ್ಯ ಕಲ್ಪಿಸುವ ಯೋಜನೆ, ಸಣ್ಣ ನೀರಾವರಿ ಇಲಾಖೆಯ ವತಿಯಿಂದ ರಾಯಚೂರು ಜಿಲ್ಲೆಯ ಚಿಕ್ಕಲಪರ್ವಿ ಹತ್ತಿರ ತುಂಗಭದ್ರಾ ನದಿಗೆ ಬಿ.ಸಿ.ಬಿ ನಿರ್ಮಾಣ, ಮಾನ್ವಿ ತಾಲ್ಲೂಕಿನ ಕುರ್ಡಿ ಕೆರೆ ತುಂಬಿಸುವ ಯೋಜನೆಯನ್ನು ಕೈಗೆತ್ತಿಕೊಳ್ಳುವುದಾಗಿಯೂ ಘೋಷಿಸಿದ್ದಾರೆ. ಲೋಕೋಪಯೋಗಿ ಇಲಾಖೆ ವತಿಯಿಂದ ಮಂತ್ರಾಲಯ ಮತ್ತು ಪಂಚಮುಖಿ ಗಾಣಧಾಳಕ್ಕೆ ಸಂಪರ್ಕ ಕಲ್ಪಿಸಲು ರಾಯಚೂರಿನ ಚಿಕ್ಕಮಂಚಾಲಿ ಗ್ರಾಮದ ಬಳಿ ಬ್ರಿಡ್ಜ್-ಕಂ-ಬ್ಯಾರೇಜಿನ ಕಾಮಗಾರಿಗೆ 158 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದರಿಂದ ರಾಯಚೂರು ಭಾಗದಲ್ಲಿ ಪ್ರವಾಸೋದ್ಯಮಕ್ಕೆ ಪುಷ್ಟಿ ನೀಡಲಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ರಾಯಚೂರಿನಲ್ಲಿ ಕೇಂದ್ರ ಸರಕಾರದ ಸಹಯೋಗದೊಂದಿಗೆ ಉಪಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ತಾರಾಲಯ ಸ್ಥಾಪನೆ.

ನನ್ನ ಉಸ್ತುವಾರಿ ಜಿಲ್ಲೆಯಾದ ಕೊಡಗು ಜಿಲ್ಲೆಗೂ ಹಲವು ಪ್ರಮುಖ ಯೋಜನೆಗಳನ್ನು ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ಮಡಿಕೇರಿಯಲ್ಲಿ ಉಪಪ್ರಾದೇಶಿಕ ವಿಜ್ಞಾನ ಕೇಂದ್ರದ ಕಾಮಗಾರಿಯನ್ನು ಚುರುಕುಗೊಳಿಸಲಾಗುವುದು. ಮಡಿಕೇರಿಯಲ್ಲಿ ಸಾರಿಗೆ ಇಲಾಖೆಯ ವತಿಯಿಂದ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥಗಳನ್ನ ಅಭವೃದ್ದಿಪಡಿಸಲಾಗುವುದು. ಅಲ್ಲದೇ ವಿರಾಜಪೇಟೆಯಲ್ಲಿ ಹೊಸ ನ್ಯಾಯಾಲಯ ಸಂಕೀರ್ಣವನ್ನು 12 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುವುದು. ಕೊಡುಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ 5 ಕೋಟಿ ವೆಚ್ಚದಲ್ಲಿ ಕ್ರೀಡಾ ವಸತಿ ನಿಲಯ ಕಟ್ಟಡವನ್ನು ನಿರ್ಮಿಸುವುದಾಗಿ ಘೋಷಿಸಿದ್ದಾರೆ. ಈ ಮೂಲಕ ಜಿಲ್ಲೆಯ ಅಭಿವೃದ್ದಿಗೆ ಆದ್ಯತೆ ನೀಡಿದ್ದಾರೆ.

ಒಟ್ಟಾರೆಯಾಗಿ ಮುಖ್ಯಮಂತ್ರಿಗಳು ನಮ್ಮ ಕಲ್ಯಾಣ ಕರ್ನಾಟಕ ಭಾಗದ ಆಶೋತ್ತರಗಳಿಗೆ ಹಾಗೂ ಈ ಪ್ರದೇಶದ ಜನಪ್ರತಿನಿಧಿಗಳ ಬೇಡಿಕೆಗೆ ಪೂರಕವಾಗಿ ಸ್ಪಂದಿಸಿದ್ದಾರೆ. ಈ ಬಜೆಟ್ನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ದಿಗೆ 5 ಸಾವಿರ ಕೋಟಿ ಮೀಸಲಿಟ್ಟಿರುವುದು ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಕಾಂಗ್ರೆಸ್ ಸರಕಾರ ಬದ್ದತೆಯನ್ನ ತೋರಿಸುತ್ತದೆ ಎಂದಿದ್ದಾರೆ.

ಸಮತೋಲನ ಹಣ ಹಂಚಿಕೆ ಮೂಲಕ ಆರ್ಥಿಕ ಶಿಸ್ತು ಕಾಪಾಡಿದ್ದಾರೆ: ಗೃಹ ಸಚಿವ ಜಿ.ಪರಮೇಶ್ವರ

ರಾಜ್ಯದ ಬಡ, ಮಧ್ಯಮ ವರ್ಗದ ಜನರ ಹಾಗೂ ಮಹಿಳೆಯರು, ಯುವಕರು, ಕೃಷಿಕರು, ಕ್ರೀಡಾಪಟುಗಳು ಸೇರಿದಂತೆ ಸರ್ವಜನರ ಸಮಗ್ರ ಅಭಿವೃದ್ಧಿಗೆ ಪೂರಕವಾದ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ್ದಾರೆ ಎಂದು ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಅಭಿಪ್ರಾಯಪಟ್ಟಿದ್ದಾರೆ.

ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಯಾವುದೇ ರೀತಿಯ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗುವುದಿಲ್ಲ ಎಂಬುದನ್ನು ಸ್ಪಷ್ಟ ಸಂದೇಶ ಸಾರಿದ್ದಾರೆ. ಈ ಮೂಲಕ ವಿಪಕ್ಷದವರ ಆರೋಪಗಳಿಗೆ ದಿಟ್ಟ ಉತ್ತರ ಕೊಟ್ಟಿದ್ದು, ರಾಜ್ಯದ ಅಭಿವೃದ್ಧಿ ವೇಗ ಹೆಚ್ಚಿಸಿರುವುದು ಹಾಗೂ ಅಖಂಡ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಯನ್ನು ಮತ್ತೊಮ್ಮೆ ಎತ್ತಿ ಹಿಡಿದಿರುವುದನ್ನು ಬಜೆಟ್‌ನಲ್ಲಿ ಕಾಣಬಹುದು ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲ ಇಲಾಖೆಗಳ ನಿರೀಕ್ಷೆಯಂತೆ ಸಮತೋಲನವಾಗಿ ಹಣ ಹಂಚಿಕೆ ಮಾಡಿ, ಆರ್ಥಿಕ ಶಿಸ್ತನ್ನು ಕಾಪಾಡಿದ್ದಾರೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡಿರುವ ಅನ್ಯಾಯವನ್ನು ಬಜೆಟ್‌ನಲ್ಲಿ ಪ್ರಸ್ತಾಪಿಸಿರುವುದರಿಂದ ವಿಪಕ್ಷದವರು ಮುನಿಸಿಕೊಂಡು ಬಾಯ್ಕಟ್ ಮಾಡಿದ್ದಾರೆ. ಇದನ್ನು ಗಮನಿಸಿರುವ ರಾಜ್ಯದ ಜನ, ಮುಂದಿನ ದಿನಗಳಲ್ಲಿ ಸೂಕ್ತ ಉತ್ತರ ನೀಡಲಿದ್ದಾರೆ‌ ಎಂದು ಹೇಳಿದ್ದಾರೆ.

ಸೈಬರ್ ವಂಚಕರಿಗೆ ಬಿಸಿ

ಕಿಡಿಗೇಡಿಗಳು ಸಮಾಜದಲ್ಲಿ ಸುಳ್ಳು ಸುದ್ದಿಗಳನ್ನು ಹರಡಿಸಿ ಸಾರ್ವಜನಿಕರಲ್ಲಿ ಅಭದ್ರತೆ ಮತ್ತು ಭಯವನ್ನು ಉಂಟು ಮಾಡಲು ಯತ್ನಿಸುತ್ತಿದ್ದಾರೆ. ಅಂತವರ ವಿರುದ್ಧ ದಿಟ್ಟ ಕ್ರಮ ಕೈಗೊಳ್ಳಲು ಐಟಿಬಿಟಿ ಇಲಾಖೆಯ ಸಹಯೋಗದಲ್ಲಿ ಸತ್ಯ ತಪಾಸಣಾ ತಂಡಗಳನ್ನು (information disorder tackling unit) ರಚಿಸಲು ಮತ್ತು ಒಳಾಡಳಿತ ಇಲಾಖೆಯಲ್ಲಿ ಒಂದು ವಿಶೇಷ ಕೋಶವನ್ನು ರಚಿಸಿ ಅದಕ್ಕೆ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲು ಅಧಿಕಾರ ನೀಡಿರುವುದು ಅಭಿನಂದನೀಯ ವಿಚಾರ.

ಡೀಪ್‌ಫೇಕ್ ಮತ್ತಿತರ ಸೈಬರ್ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಗ್ಧ ಸಾರ್ವಜನಿಕರನ್ನು ವಂಚಿಸುವ ಕೃತ್ಯ ಎಸಗುವವರ ವಿರುದ್ಧ ತನಿಖೆ ನಡೆಸಿ ಪರಿಣಾಮಕಾರಿ ಕ್ರಮ ತೆಗೆದುಕೊಳ್ಳುವ ಉದ್ದೇಶದಿಂದ ರಾಜ್ಯದಲ್ಲಿ ಸೈಬರ್ ಕ್ರೈಂ ವಿಭಾಗವನ್ನು ಬಲಪಡಿಸಲು ಒಟ್ಟು 43 ಸಿಇಎನ್ (ಸೈಬರ್, ಎಕಾನಾಮಿಕ್, ನಾರ್ಕೋಟಿಕ್ಸ್) ಪೊಲೀಸ್ ಠಾಣೆಗಳನ್ನು ಉನ್ನತೀಕರಿಸಲು ಒತ್ತು ನೀಡಿರುವುದು ಶ್ಲಾಘನೀಯ.‌ ಇದರಿಂದ ಸೈಬರ್ ಅಪರಾಧಗಳನ್ನು ಮಟ್ಟ ಹಾಕಲು ಸಹಕಾರಿಯಾಗಲಿದೆ. ಅಧಿಕಾರಿ ಮತ್ತು ಸಿಬ್ಬಂದಿಗಳು ಚುರುಕಾಗಿ ಕೆಲಸ ಮಾಡಲು ಸಹಾಯವಾಗಲಿದೆ ಎಂದು ಹೇಳಿದ್ದಾರೆ.

ಪೊಲೀಸ್ ಕಾಳಜಿ

ಈ ಹಿಂದೆ ಸಿದ್ದರಾಮಯ್ಯ ಅವರ ನೇತೃತ್ವದ ನಮ್ಮ ಸರ್ಕಾರವು ಪೊಲೀಸ್ ಗೃಹ ಯೋಜನೆಯನ್ನು ಜಾರಿಗೆ ತಂದಿತ್ತು. ಪೊಲೀಸ್ ಗೃಹ 2025 ಯೋಜನೆಯಡಿ ಈವರೆಗೆ 800 ಕೋಟಿ ರೂ.ಗಳ ವೆಚ್ಚದಲ್ಲಿ 1,128 ವಸತಿ ಗೃಹಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಲಾಗಿದೆ. 2,956 ವಸತಿ ಗೃಹಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಈ ಯೋಜನೆಗೆ 2024-25ನೇ ಸಾಲಿನಲ್ಲಿ 200 ಕೋಟಿ ರೂ.ಗಳ ಅನುದಾನ ಒದಗಿಸಿರುವುದು ಇಲಾಖೆಯ ಸಿಬ್ಬಂದಿಗಳ ಮೇಲಿರುವ ಕಾಳಜಿಯನ್ನು ತೋರಿಸುತ್ತದೆ. ಇದು ಅತ್ಯಂತ ಅಭಿನಂದನೀಯ ಎಂದಿದ್ದಾರೆ.

ತಾಂತ್ರಿಕ ಬಲವರ್ಧನೆ

ಕಟ್ಟಡ ರಹಿತ ಪೊಲೀಸ್ ಠಾಣೆ ಮತ್ತು ಕಚೇರಿಗಳಿಗೆ 30 ಕೋಟಿ ರೂ.ಗಳ ವೆಚ್ಚದಲ್ಲಿ ಸ್ವಂತ ಕಟ್ಟಡಗಳನ್ನು ನಿರ್ಮಿಸಲು ಅನುವು ಮಾಡಿಕೊಡಲಾಗಿದೆ. ವಿಧಿ ವಿಜ್ಞಾನ ಪ್ರಯೋಗಾಲಯಗಳ (ಫೊರೆನ್ಸಿಕ್ ಸೈನ್ಸ್ ಲ್ಯಾಬ್) ಮೊಬೈಲ್ ಫೊರೆನ್ಸಿಕ್, ಆಡಿಯೋ ಮತ್ತು ವೀಡಿಯೋ ವಿಭಾಗಗಳನ್ನು ಬಲಪಡಿಸಲು 10 ಕೋಟಿ ರೂ.ಗಳ ವೆಚ್ಚದಲ್ಲಿ ಅಗತ್ಯ ಉಪಕರಣಗಳನ್ನು ಮತ್ತು ತಂತ್ರಾಂಶಗಳನ್ನು ಒದಗಿಸಲಾಗಿದೆ. ಅಲ್ಲದೆಡ, ರಾಜ್ಯದ ಎಲ್ಲ ಕಾರಾಗೃಹಗಳ ಸುಗಮ ಆಡಳಿತ ಮತ್ತು ಭದ್ರತೆಗಾಗಿ 5 ಕೋಟಿ ರೂ. ವೆಚ್ಚದಲ್ಲಿ ಕೃತಕ ಬುದ್ಧಿಮತ್ತೆ (Artificial intaligence) ತಂತ್ರಾಂಶ, ಬ್ಯಾಗೇಜ್ ಸ್ಕ್ಯಾನರ್ ಮುಂತಾದ ಆಧುನಿಕ ಉಪಕರಣಗಳ ಖರೀದಿಸಲು ಒತ್ತು ನೀಡಿರುವುದರಿಂದ ಪೊಲೀಸರ ಕಾರ್ಯ ಕ್ಷಮತೆ ಹೆಚ್ಚಾಗಲಿದೆ ಎಂದು ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯಲ್ಲಿ 100 ಕೋಟಿ ರೂ.ಗಳ ವೆಚ್ಚದಲ್ಲಿ ಹೊಸದಾಗಿ ಹೈ ಸೆಕ್ಯೂರಿಟಿ ಕಾರಾಗೃಹ ನಿರ್ಮಾಣ, ಅಗ್ನಿಶಾಮಕ ಇಲಾಖೆಯ ಕಾರ್ಯಕ್ಷಮತೆಯನ್ನು ಹೆಚ್ಚಿಸಲು The Karnataka fire force act 1964ರನ್ವಯ ರಾಜ್ಯದಲ್ಲಿ ಹೊಸದಾಗಿ ನಿರ್ಮಾಣವಾಗುವ ಬಹುಮಹಡಿ ಕಟ್ಟಡಗಳ ಆಸ್ತಿ ತೆರಿಗೆಯೊಂದಿಗೆ ಶೇ.1ರ ದರದಲ್ಲಿ Fire Cess ವಿಧಿಸುತ್ತಿರುವುದು ಸೂಕ್ತ ನಿರ್ಧಾರ. ಬೆಂಗಳೂರಿನ ಪೊಲೀಸ್ ಸುಲಿವನ್ ಮೈದಾನದಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ಆಸ್ಟ್ರೋ ಟರ್ಫ್ ಹಾಕಿ ಪ್ರಾಂಗಣವನ್ನು ನಿರ್ಮಿಸಲು ಘೋಷಣೆ ಮಾಡಿರುವುದು ಸ್ವಾಗತಾರ್ಹ ಎಂದು ಹೇಳಿದ್ದಾರೆ.

ತುಮಕೂರು ಅಭಿವೃದ್ಧಿಗೆ ಒತ್ತು

ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿ ತುಮಕೂರು ಮಹಾನಗರಕ್ಕೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಒತ್ತು, ವಸಂತನರಸಾಪುರದಲ್ಲಿ ಇಂಟಿಗ್ರೇಟೆಡ್ ಟೌನ್‌ಶಿಪ್ ನಿರ್ಮಾಣಕ್ಕೆ ಒತ್ತು ನೀಡಿರುವುದು. ಬೆಂಗಳೂರಿನಿಂದ ತುಮಕೂರುವರೆಗೆ ಮೆಟ್ರೋ ರೈಲು ವಿಸ್ತರಣೆಗೆ ಕಾರ್ಯ ಸಾಧಕ ಸಿದ್ಧಪಡಿಸಲು ಬಜೆಟ್‌ನಲ್ಲಿ ಅಸ್ತು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆಗಳು. ಬಜೆಟ್‌ನಲ್ಲಿ ಘೋಷಣೆಯಾಗಿರುವ ಈ ಎಲ್ಲ ಯೋಜನೆಗಳು ತುಮಕೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಗಲಿವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪರಿಪೂರ್ಣ ದೃಷ್ಟಿಯ ಬಜೆಟ್: ಎಂ ಬಿ ಪಾಟೀಲ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಸಾಮಾಜಿಕ ನ್ಯಾಯ, ಆರ್ಥಿಕ ಅಭಿವೃದ್ಧಿ, ಕೈಗಾರಿಕಾ ಬೆಳವಣಿಗೆ ಮತ್ತು ಪ್ರಾದೇಶಿಕ ತಾರತಮ್ಯ ನಿವಾರಣೆಯ ಹೆಗ್ಗುರಿಗಳನ್ನುಳ್ಳ ಪರಿಪೂರ್ಣ ದೃಷ್ಟಿಯ ಜನಪ್ರಿಯ ಬಜೆಟ್ ಆಗಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ಅದರಲ್ಲೂ ನಮ್ಮ ತವರು ಜಿಲ್ಲೆಯಾದ ವಿಜಯಪುರದ ಆಲಮೇಲದಲ್ಲಿ ತೋಟಗಾರಿಕೆ ಕಾಲೇಜು, ಇಟ್ಟಂಗಿಹಾಳದ ಬಳಿ ಆಹಾರ ಪಾರ್ಕ್ ಮತ್ತು ಆಲಮಟ್ಟಿಯಲ್ಲಿ ಒಳನಾಡು ಮೀನುಗಾರಿಕೆ ಕೌಶಲ್ಯಾಭಿವೃದ್ಧಿ ಕೇಂದ್ರವನ್ನು ಘೋಷಿಸಿರುವುದಕ್ಕೆ ಜಿಲ್ಲೆಯ ಜನತೆಯ ಪರವಾಗಿ ಧನ್ಯವಾದ ಸಮರ್ಪಿಸುತ್ತೇನೆ ಎಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

ಇದು ಸಿದ್ದರಾಮಯ್ಯನವರ ದಾಖಲೆಯ ಬಜೆಟ್ ಆಗಿದೆ. ಭಾರತದ ಶಾಸಕಾಂಗ ಇತಿಹಾಸದಲ್ಲಿ 15 ಬಾರಿ ಬಜೆಟ್ ಮಂಡಿಸಿರುವವರು ತೀರಾ ಕಡಿಮೆ ಇದ್ದಾರೆ. ಮುಖ್ಯಮಂತ್ರಿಗಳು ತಮ್ಮ ಬಜೆಟ್ಟಿನಲ್ಲಿ ಶಕ್ತಿಶಾಲಿ ಕರ್ನಾಟಕ ನಿರ್ಮಾಣದ ತಮ್ಮ ದೂರದೃಷ್ಟಿಯನ್ನು ರಾಜ್ಯದ ಜನತೆಯ ಮುಂದಿಟ್ಟಿದ್ದಾರೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ಕೃಷಿ, ರೈತರ ಸಬಲೀಕರಣ, ಕೈಗಾರಿಕೆ, ಮೂಲಸೌಕರ್ಯ, ಆಧುನಿಕ ಉದ್ಯಮಗಳಿಗೆ ಒತ್ತು, ಉದ್ಯೋಗಸೃಷ್ಟಿಯ ಕಡೆಗೆ ಗಮನ, ಶ್ರೀಶೈಲ, ಮಂತ್ರಾಲಯದಂತಹ ಪುಣ್ಯಕ್ಷೇತ್ರಗಳಲ್ಲಿ ಸೌಲಭ್ಯ ಹೆಚ್ಚಳ, ಮೀನುಗಾರಿಕೆಗೆ ಆದ್ಯತೆ, ಆರೋಗ್ಯ ಕ್ಷೇತ್ರದ ಉನ್ನತೀಕರಣ ಇವೆಲ್ಲವುಗಳಿಗೂ ಅವರು ಸಮಾನ ಒತ್ತು ನೀಡುವುದರ ಮೂಲಕ ಇಡೀ ಕರ್ನಾಟಕದ ಅಭಿವೃದ್ಧಿಗೆ ಹೊಂದಿರುವ ಬದ್ಧತೆಯನ್ನು ಪ್ರದರ್ಶಿಸಿದ್ದಾರೆ. ಇವುಗಳು ಮುಂಬರುವ ದಿನಗಳಲ್ಲಿ ಫಲ ಕೊಡಲಿವೆ ಎಂದು ಅವರು ಪ್ರತಿಪಾದಿಸಿದ್ದಾರೆ.

ರಾಜ್ಯದಲ್ಲಿ ರಾಜಸ್ವ ಸಂಗ್ರಹ ಹೆಚ್ಚಳ ಜೊತೆಯಲ್ಲೇ ದುರ್ಬಲರನ್ನು ಮೇಲಕ್ಕೆತ್ತುವ ಕಡೆಗೂ ಗಮನ ಕೊಡಬೇಕಾದ ತುರ್ತಿದೆ. ಆದರೆ, ನಾವು ಜಿಎಸ್ಟಿ ಸಂಗ್ರಹಣೆಯಲ್ಲಿ ದೇಶಕ್ಕೇ ಎರಡನೇ ಸ್ಥಾನದಲ್ಲಿದ್ದರೂ ಕೇಂದ್ರದ ಬಿಜೆಪಿ ಸರಕಾರವು ಅದರ ಹಂಚಿಕೆಯಲ್ಲಿ ಅನ್ಯಾಯ ಮಾಡುತ್ತಿದೆ. ಅದರ ಗಮನವೆಲ್ಲ ಬರೀ ಉತ್ತರ ಭಾರತದ ರಾಜ್ಯಗಳ ಕಡೆಗಿದೆ. ಇಂತಹ ಮಲತಾಯಿ ಧೋರಣೆಯ ವಿರುದ್ಧ ಸಿದ್ದರಾಮಯ್ಯನವರು ಬಜೆಟ್ಟಿನಲ್ಲೇ ಪ್ರಸ್ತಾಪಿಸಿರುವುದು ರಾಜ್ಯದ ಹಕ್ಕುಗಳ ಸಂರಕ್ಷಣೆ ಕುರಿತು ನಮಗಿರುವ ಕಳಕಳಿಯನ್ನು ತೋರಿಸುತ್ತದೆ ಎಂದು ಪಾಟೀಲ ಸಮರ್ಥಿಸಿಕೊಂಡಿದ್ದಾರೆ.

ರಾಜ್ಯದಲ್ಲಿ ಆರ್ಥಿಕ ಅಭಿವೃದ್ಧಿ ಮತ್ತು ಮೂಲಸೌಕರ್ಯ ಜಾಲದ ಬೆಳವಣಿಗೆಗೆ ನಿಕಟ ಸಂಬಂಧವಿದೆ. ಸಿದ್ದರಾಮಯ್ಯನವರು ಇದನ್ನು ಅರ್ಥ ಮಾಡಿಕೊಂಡಿದ್ದು, `ಕರ್ನಾಟಕ ಮೂಲಸೌಲಭ್ಯ ಯೋಜನೆ ಅಭಿವೃದ್ಧಿ ನಿಧಿ’ಯಡಿ ಕಾರ್ಯಸಾಧ್ಯತಾ ವರದಿಗಳನ್ನು ಸಿದ್ಧಪಡಿಸಲು ಹೊಸ ಘೋಷಣೆ ಮಾಡಿರುವುದು ಸ್ವಾಗತಾರ್ಹವಾಗಿದೆ. ಅದರಲ್ಲೂ ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿರುವ ಬೆಂಗಳೂರು ನಗರದಲ್ಲಿ ವಿಶ್ವ ದರ್ಜೆಯ ಉತ್ಕೃಷ್ಟ ಮೂಲಸೌಕರ್ಯ ಅಭಿವೃದ್ಧಿಪಡಿಸಲು ನಮ್ಮ ಸರಕಾರ ಹೊಂದಿರುವ ಇಚ್ಛಾಶಕ್ತಿಯನ್ನು ಸಿದ್ದರಾಮಯ್ಯನವರು ಬಜೆಟ್ಟಿನಲ್ಲಿ ಬಿಂಬಿಸಿದ್ದಾರೆ. ಇದರಿಂದಾಗಿ ಮುಂಬರುವ ದಿನಗಳಲ್ಲಿ ಬೆಂಗಳೂರಿಗೆ ಮತ್ತಷ್ಟು ಅತ್ಯಾಧುನಿಕ ಉದ್ಯಮಗಳು ಬರಲು ಸಹಾಯವಾಗಲಿದೆ ಎಂದು ಸಚಿವರು ಬಣ್ಣಿಸಿದ್ದಾರೆ.

ಒಟ್ಟಿನಲ್ಲಿ ಇದೊಂದು ರಚನಾತ್ಮಕ ಬಜೆಟ್ ಆಗಿದ್ದು, ಇದರಲ್ಲಿ ಅಭಿವೃದ್ಧಿಯ ಸಮಗ್ರ ದೃಷ್ಟಿ ಅಡಗಿದೆ. ಇದರಿಂದಾಗಿ ನಿಜವಾದ ಅರ್ಥದಲ್ಲಿ ನವಕರ್ನಾಟಕದ ನಿರ್ಮಾಣ ಆಗಲಿದೆ. ಕಾಂಗ್ರೆಸ್ ಸರಕಾರವು ಬಿಜೆಪಿಯಂತೆ ಜಾತಿ-ಧರ್ಮಗಳ ಹೆಸರಿನಲ್ಲಿ ತಾರತಮ್ಯ ಮಾಡುವುದರಲ್ಲಿ ನಂಬಿಕೆ ಹೊಂದಿಲ್ಲ. ಬದಲಿಗೆ ಎಲ್ಲರನ್ನೂ ಒಳಗೊಂಡ ಮತ್ತು ಎಲ್ಲರನ್ನೂ ಜೊತೆಯಲ್ಲಿ ಕರೆದೊಯ್ಯುವ ವಿಕಸಿತ ಕರ್ನಾಟಕದ ಅಭಿವೃದ್ಧಿಗೆ ಕಂಕಣಬದ್ಧವಾಗಿದೆ ಎಂದು ಅವರು ವ್ಯಾಖ್ಯಾನಿಸಿದ್ದಾರೆ.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ