ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಮನುವಾದಿಗಳು ಇದ್ದಕಿದ್ದಂತೆ ಅಂಬೇಡ್ಕರ್ ಮೇಲೆ ಪ್ರೀತಿ ಬಂದಂತೆ ಆಡುತ್ತಿದ್ದಾರೆ

ಚುನಾವಣೆಯಲ್ಲಿ ನನ್ನ ಸೋಲಿಗೆ ಸಾವರ್ಕರ್ ಕಾರಣ ಎಂದು ಸ್ವತಃ ಅಂಬೇಡ್ಕರ್ ಅವರೇ ಬರೆದಿದ್ದಾರೆ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು, ಏಪ್ರಿಲ್ 14: ಚುನಾವಣೆಯಲ್ಲಿ ನನ್ನ ಸೋಲಿಗೆ ಸಾವರ್ಕರ್ ಕಾರಣ ಎಂದು ಸ್ವತಃ ಅಂಬೇಡ್ಕರ್ ಅವರೇ ಬರೆದಿದ್ದಾರೆ. ಆದರೆ ಅಂಬೇಡ್ಕರ್ ಸೋಲಿಗೆ ಕಾಂಗ್ರೆಸ್ ಕಾರಣ ಎಂದು ಮನುವಾದಿಗಳು ಹಸಿ ಸುಳ್ಳಿನ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಮನುವಾದಿಗಳು ಇದ್ದಕಿದ್ದಂತೆ ಅಂಬೇಡ್ಕರ್ ಮೇಲೆ ಪ್ರೀತಿ ಬಂದಂತೆ ಆಡುತ್ತಿದ್ದಾರೆ. ಆದರೆ ಸಂವಿಧಾನವನ್ನು ಮೊದಲಿಗೆ ವಿರೋಧಿಸಿದ್ದು ಇವರೇ. ಸಂವಿಧಾನದ ಜಾರಿಯನ್ನು ವಿರೋಧಿಸಿದ್ದವರೇ ಈ ಮನುವಾದಿಗಳಾಗಿದ್ದಾರೆ. ಸಂವಿಧಾನ ಜಾರಿ ಆದ 75 ವರ್ಷಗಳ ಹಿಂದೆಯೇ ವೈರುದ್ಯ ಇರುವ ಸಮಾಜಕ್ಕೆ ಕಾಲಿಡುತ್ತಿದ್ದೇವೆ ಎಂದು ಸಂವಿಧಾನ ಜಾರಿಯಾದ ದಿನ 1950 ಜನವರಿ 26 ರಂದು ಅಂಬೇಡ್ಕರ್ ಹೇಳಿದ್ದರು. ಸಂವಿಧಾನದ ಆಶಯ ಈಡೇರಬೇಕಾದರೆ ಅಸಮಾನತೆ, ಅಸ್ಪ್ರಶ್ಯತೆ ಅಳಿಯಬೇಕು. ಜಾತಿ ವ್ಯವಸ್ಥೆ ಇರುವವರೆಗೆ ಸಮಾನತೆ ಬರುವುದಿಲ್ಲ, ಅಸ್ಪೃಶ್ಯತೆ ಅಳಿಯುವುದಿಲ್ಲ ಎಂದು ಅಂಬೇಡ್ಕರ್ ಹೇಳಿದ್ದಾರೆ. ಅಂಬೇಡ್ಕರ್ ಇಲ್ಲದೇ ಹೋಗಿದ್ದರೆ ಎಲ್ಲರಿಗೂ ಶಿಕ್ಷಣ ದೊರೆಯುತ್ತಿರಲಿಲ್ಲ ಎಂದರು.

SCP/ TSP ಕಾಯ್ದೆಯನ್ನು ಜಾರಿಗೆ ತಂದ ರಾಜ್ಯಗಳಲ್ಲಿ ನಮ್ಮ ಕರ್ನಾಟಕ ರಾಜ್ಯ ಮೊದಲು ಅದರಲ್ಲೂ ನಮ್ಮ ಕಾಂಗ್ರೇಸ್ ಸರ್ಕಾರ ಈ ಕಾಯ್ದೆಯನ್ನು ಜಾರಿಗೆ ತಂದಿತು. ಕರ್ನಾಟಕ ಮತ್ತು ಆಂಧ್ರ ಪ್ರದೇಶ ಹೊರತುಪಡಿಸಿ ಈ ಕಾಯ್ದೆ ಬೇರೆ ಯಾವುದೇ ರಾಜ್ಯದಲ್ಲಿ ಜಾರಿ ಮಾಡಿಲ್ಲ. ಬಜೆಟ್ ಗಾತ್ರ ಹೆಚ್ಚಾದಂತೆ SCP/ TSP ಹಣ ಹೆಚ್ಚಾಗಬೇಕು. ಆದರೆ ಬಿಜೆಪಿ ಸರ್ಕಾರ ಕಡಿಮೆ ಮಾಡಿತು‌. ಆದರೆ ನಾವು ಅಧಿಕಾರಕ್ಕೆ ಬಂದ ಬಳಿಕ ಮತ್ತೆ ಯೋಜನಾ ಗಾತ್ರಕ್ಕೆ ತಕ್ಕಂತೆ ಹೆಚ್ಚಿಸಿದ್ದೀವಿ. ಕಳೆದ ವರ್ಷ ನಮ್ಮ ಸರ್ಕಾರ ಆಯವ್ಯಯದಲ್ಲಿ SCP/ TSP ಯೋಜನೆಯಡಿ ರೂ 32 ಸಾವಿರ ಕೋಟಿಗಳನ್ನು ಮೀಸಲಿಟ್ಟಿತ್ತು. ಈ ಬಾರಿ 42,018 ಕೋಟಿ ರೂಪಾಯಿಯನ್ನು ನಾವು ತೆಗೆದಿಟ್ಟಿದ್ದೀವಿ. 8,300 ಕೋಟಿ SCP/ TSP ಹಣ ದುರುಪಯೋಗ ಪಡಿಸಿಕೊಂಡಿದ್ದು ಬಿಜೆಪಿ. ಇವರು ನಾಚಿಕೆ ಇಲ್ಲದೆ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ತಿಳಿಸಿದರು.

ಈ ಹಿಂದೆ ನಮ್ಮ ಕಾಂಗ್ರೇಸ್ ಸರ್ಕಾರದ ಆಡಳಿತಾವಧಿಯಲ್ಲಿ ಬಡ್ತಿಯಲ್ಲಿ ಮೀಸಲಾತಿಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ಶ್ರೀಮತಿ ರತ್ನಪ್ರಭ, ಮುಖ್ಯಕಾರ್ಯದರ್ಶಿಗಳು ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿ ಬಡ್ತಿಯಲ್ಲಿ ಮೀಸಲಾತಿಯನ್ನು ಜಾರಿಗೆ ತರಲಾಯಿತು. ಈ ಸಂಬಂಧ ಸುಪ್ರಿಂಕೋರ್ಟ್‍ನಲ್ಲಿಯೂ ಸಹ ಹೋರಾಟ ಮಾಡಿ ಅಲ್ಲಿಯೂ ಜಯ ಸಾಧಿಸಲಾಯಿತು. ಅದೇ ರೀತಿ ಕಾಮಗಾರಿ ಗುತ್ತಿಗೆ ನೀಡುವಲ್ಲಿಯೂ ಸಹ ಮೀಸಲಾತಿಯನ್ನು ನಮ್ಮ ಸರ್ಕಾರ ಜಾರಿಗೆ ತಂದಿದೆ ಎಂದು ತಿಳಿಸಿದರು.

ಅಂಬೇಡ್ಕರ್ ಅವರ ಆಶಯಗಳ ಜಾರಿಗಾಗಿ ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ನಮ್ಮ ಜನರ ಕೊಳ್ಳುವ ಶಕ್ತಿಯನ್ನು ಹೆಚ್ಚಿಸಿದ್ದೇವೆ. ವಿದ್ಯಾವಂತರೇ ಹೆಚ್ಚು ಜಾತಿವಾದಿಗಳಾಗುತ್ತಿರುವುದು ಸರಿಯಲ್ಲ. ಶಿಕ್ಷಣದ ಉದ್ದೇಶ ಜಾತಿವಾದಿಗಳಾಗುವುದಲ್ಲ. ಬಾಬಾ ಸಾಹೇಬ್ ಒಬ್ಬ ವ್ಯಕ್ತಿ ಇಡೀ ದೇಶದ ಶಿಕ್ಷಣ ವಂಚಿತ ನೂರಾರು ಜಾತಿ ಸಮುದಾಯಗಳಿಗೆ ಶಿಕ್ಷಣ ಸಿಗಲು ಕಾರಣಕರ್ತರಾದರು. ಮುಸಲ್ಮಾನರು ಶಿಕ್ಷಣದಿಂದ ವಂಚಿತರಾಗಬಾರದು, ಅವಕಾಶಗಳಿಂದ ವಂಚಿತರಾಗಬಾರದು, ಹೀಗಾಗಿ ಸಂವಿಧಾನ ಹೇಳಿದಂತೆ ನಾವು ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗೆ ಅವಕಾಶ ಕಲ್ಪಿಸುತ್ತಿದ್ದೇವೆ. ಇಷ್ಟಕ್ಕೇ ಕಾಂಗ್ರೆಸ್ ಬರೀ ಮುಸಲ್ಮಾನರನ್ನು ಓಲೈಸುತ್ತಿದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಬಹುತ್ವದ ದೇಶ ನಿರ್ಮಾಣಕ್ಕೆ, ಬ್ರಾತೃತ್ವದ ಸಮಾಜ ನಿರ್ಮಾಣಕ್ಕೆ ಅಂಬೇಡ್ಕರ್ ಅವರು ಕೊಟ್ಟ ಮಾರ್ಗದಲ್ಲಿ ನಮ್ಮ ಸರ್ಕಾರ ನಡೆಯುತ್ತಿದೆ. ನೆಲ್ಸನ್ ಮಂಡೇಲ ಅವರು ನಾನು ಸಂವಿಧಾನ ಬರೆಯಲು ಸ್ಪೂರ್ತಿ ಭಾರತದ ಸಂವಿಧಾನ ಎಂದು ಹೇಳಿದ್ದಾರೆ. ಅಂತಹ ಸಂವಿಧಾನವನ್ನು ನಮ್ಮ ದೇಶಕ್ಕೆ ಕೊಟ್ಟ ಮಹಾನ್ ಚೇತನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು. ಅವರ ಆಶಯದಂತೆ ನಾವು ಅವರು ರೂಪಿಸಿ ಕೊಟ್ಟಿರುವ ಸಂವಿಧಾನದಂತೆ ನಡೆಯುವುದೇ ನಾವು ಅವರಿಗೆ ಸಲ್ಲಿಸುವ ಗೌರವ ಎಂದು ತಿಳಿಸಿದರು.

ಸರಾಯಿ ಬೇಡ, ಶಾಲೆ ಬೇಕು ಎನ್ನುವುದು ದಲಿತ ಸಂಘರ್ಷ ಸಮಿತಿ ಹೋರಾಟದ ಘೋಷಣೆಯಾಗಿತ್ತು. ನಾನು ಉಪಮುಖ್ಯಮಂತ್ರಿ ಆದ ತಕ್ಷಣ ಊರು ಊರಲ್ಲಿ ವಸತಿ ಶಾಲೆ ಆರಂಭಿಸಿದೆ. ಮುಂದಿನ ಆರ್ಥಿಕ ವರ್ಷದ ಕೊನೆಯ ವೇಳೆಗೆ ರಾಜ್ಯದ ಎಲ್ಲಾ ಹೋಬಳಿಗಳಲ್ಲೂ ವಸತಿ ಶಾಲೆ ತೆರೆದಿರುತ್ತವೆ ಎಂದು ಭರವಸೆ ನೀಡಿದರು.

ಎಲ್ಲರಿಗೂ ಸಮಾನ ರೀತಿಯಲ್ಲಿ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ನಾಗರೀಕ ಹಕ್ಕು ಜಾರಿ ನಿರ್ದೇಶನ ಪೊಲೀಸ್ ಠಾಣೆಗಳನ್ನು (ಡಿ.ಸಿ.ಆರ್.ಇ) ಉದ್ಘಾಟನೆ ಮಾಡಲಾಗಿದೆ. ಇಂದಿನಿಂದ 32 ಜಿಲ್ಲೆಗಳಲ್ಲಿ ಒಟ್ಟು 33 ಡಿ.ಸಿ.ಆರ್.ಇ ಪೊಲೀಸ್ ಠಾಣೆಗಳು ಕಾರ್ಯಾರಂಭ ಮಾಡಲಿವೆ. ಸಾಂಕೇತಿಕವಾಗಿ ಒಂದು ಕೇಂದ್ರ ಡಿ.ಸಿ.ಆರ್.ಇ ಠಾಣೆಯನ್ನು ಉದ್ಘಾಟಿಸಿದ್ದು, ಮೈಸೂರು ವಿಶ್ವವಿದ್ಯಾಲಯದಲ್ಲಿ ಸಂವಿಧಾನ ಪೀಠ ಮತ್ತು ಬೆಂಗಳೂರಿನಲ್ಲೂ ಆಂಧ್ರದ ಮಾದರಿಯನ್ನೂ ಮೀರಿದ ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಲಾಗುವುದು ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ