ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಕೊಪ್ಪಳದಲ್ಲಿ ₹2,000 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ವಿವಿಧ ಇಲಾಖೆಯ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿದ ಮುಖ್ಯಮಂತ್ರಿ

ಕೊಪ್ಪಳ: ಇದುವರೆಗೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ₹13,000 ಕೋಟಿ ಅನುದಾನ ನೀಡಿದ್ದೇವೆ. ಈ ಹಣ ಕೊಟ್ಟಿದ್ದೂ ನಮ್ಮದೇ ಸರ್ಕಾರ. ಕೃಷ್ಣಾ ಮೇಲ್ದಂಡೆ ವಿಚಾರದಲ್ಲಿ ರೈತರಿಗೆ 80 ಸಾವಿರ ಕೋಟಿ ರೂಪಾಯಿ ಪರಿಹಾರ ಕೊಡ್ತಾ ಇರುವುದೂ ಇದೇ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕೊಪ್ಪಳ ಜಿಲ್ಲಾ ವ್ಯಾಪ್ತಿಯಲ್ಲಿ ರೂ.2,000 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ, ವಿವಿಧ ಇಲಾಖೆಯ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದ ಸಿದ್ದರಾಮಯ್ಯ ಅವರು ನುಡಿದಂತೆ ನಡೆದ ಯಾವುದಾದರೂ ಸರ್ಕಾರ ಇದ್ದರೆ ಅದು ನಮ್ಮ ಸರ್ಕಾರ. ಬಿಜೆಪಿ ತನ್ನ ಅವಧಿಯಲ್ಲಿ ಒಂದೇ ಒಂದು ಮನೆ ಕೊಡಲಿಲ್ಲ. ಅಭಿವೃದ್ಧಿ ಕಾರ್ಯ ಮಾಡಲಿಲ್ಲ. ಈ ಕಾರಣಕ್ಕೆ ನಮ್ಮ ಅಭಿವೃದ್ಧಿ ಕಾರ್ಯಗಳ ಬಗ್ಗೆ ಹೊಟ್ಟೆಕಿಚ್ಚು ಪಡುತ್ತಿದ್ದಾರೆ. ನಾವು ಎರಡು ವರ್ಷದಲ್ಲಿ ಒಂದು ಲಕ್ಷ ಕೋಟಿ ಹಣವನ್ನು ಗ್ಯಾರಂಟಿಗಳ ಮೂಲಕ ರಾಜ್ಯದ ಜನರ ಜೇಬಿಗೆ ಹಾಕಿದ್ದೇವೆ. ಇದರಿಂದ ರಾಜ್ಯದ ಜನರ ಕೊಳ್ಳುವ ಶಕ್ತಿ ಹೆಚ್ಚಾಗಿ ರಾಜ್ಯದ ಜನರ ತಲಾ ಆದಾಯ ಹೆಚ್ಚಾಗಿ ರಾಜ್ಯದ ಆರ್ಥಿಕತೆ ಪ್ರಗತಿ ಕಂಡಿದೆ. ಈ ಬಗ್ಗೆ ಸಾಕಷ್ಟು ವರದಿಗಳು ಬಂದಿವೆ. ತಲಾ ಆದಾಯದಲ್ಲಿ ಇಡೀ ದೇಶದಲ್ಲಿ ಕನ್ನಡಿಗರೇ ನಂಬರ್ ಒನ್. ಇದು ನಮ್ಮ ಸರ್ಕಾರದ ಆರ್ಥಿಕ ಸಾಧನೆ. ತೆರಿಗೆ ಪಾವತಿಯಲ್ಲಿ ರಾಜ್ಯ ಇಡೀ ದೇಶದಲ್ಲಿ ನಂಬರ್ ಟು ಇದ್ದೇವೆ‌. ಇದು ನಮ್ಮ ಸರ್ಕಾರದ ಜಾತ್ಯತೀತ ಸಾಧನೆ ಎಂದರು.

ನಾವು ಎಲ್ಲಾ ಜಾತಿ, ಎಲ್ಲಾ ಧರ್ಮದವರ ಪ್ರಗತಿಗಾಗಿ ಯೋಜನೆ ರೂಪಿಸಿದೆವು‌‌ ಹೀಗಾಗಿ ಎಲ್ಲಾ ಜಾತಿಯ, ಎಲ್ಲಾ ಧರ್ಮದ ಜನರು ಸೇರಿ ರಾಜ್ಯದ ಆರ್ಥಿಕತೆಯನ್ನು ಪ್ರಗತಿಗೆ ಕೊಂಡೊಯ್ದಿದ್ದಾರೆ. ಕೊಪ್ಪಳ ಜಿಲ್ಲೆಯೊಂದರಲ್ಲೇ 9 ಕೋಟಿ 22 ಲಕ್ಷ ಬಾರಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದು, ಜಿಲ್ಲೆಗೆ 330 ಕೋಟಿ ಖರ್ಚಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ ಜಿಲ್ಲೆಯಲ್ಲಿ 3,17,776 ಫಲಾನುಭವಿಗಳಿಗೆ ₹1,283 ಕೋಟಿ ವಿತರಿಸಲಾಗಿದೆ. ಗೃಹಜ್ಯೋತಿ ಯೋಜನೆಯಡಿ 2,75,903 ಫಲಾನುಭವಿಗಳಿಗೆ ₹290 ಕೋಟಿ ಕೊಟ್ಟಿದ್ದೇವೆ. ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯ 1.96 ಕೋಟಿ ಜನರಿಗೆ ₹320 ಕೋಟಿ ಮೊತ್ತದ 39.097 ಮೆಟ್ರಿಕ್ ಟನ್ ದವಸಧಾನ್ಯಗಳನ್ನು ವಿತರಿಸಲಾಗಿದೆ. ಬೊಕ್ಕಸ ಖಾಲಿ ಆಗಿದ್ದರೆ ಇಷ್ಟೊಂದು ಪ್ರಮಾಣದ ಹಣವನ್ನು ಜನರಿಗೆ ಕೊಡಲಾಗುತ್ತಿತ್ತಾ? ಎಂದು ಪ್ರಶ್ನಿಸಿದರು.

ಜಿಎಸ್‌ಟಿ ಜಾರಿ ಮಾಡಿದ ಪ್ರಧಾನಿ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ಎಂಟು ವರ್ಷಗಳ ಕಾಲ ನಿರಂತರವಾಗಿ ರಾಜ್ಯದ ಮತ್ತು ದೇಶದ ಜನರ ಸುಲಿಗೆ ನಡೆಸಿತು. ನಾವು ಜಿಎಸ್‌ಟಿ ಸುಲಿಗೆ ವಿರೋಧಿಸಿ ಸರಳೀಕರಣಕ್ಕೆ ಆಗ್ರಹಿಸಿದ್ದೆವು. ಎಂಟು ವರ್ಷದ ಸುಲಿಗೆ ಬಳಿಕ ಸುಲಿಗೆ ನಡೆಸಿದವರೇ ಸರಳೀಕರಣದ ಕ್ರೆಡಿಟ್‌ಗಾಗಿ ಒದ್ದಾಡುತ್ತಿದ್ದಾರೆ. ಈಗಲೂ ಕೇಂದ್ರದಿಂದ 15 ಸಾವಿರ ಕೋಟಿ ರೂಪಾಯಿ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ. 15ನೇ ಹಣಕಾಸು ಆಯೋಗದಿಂದಲೂ ರಾಜ್ಯಕ್ಕೆ ಅನ್ಯಾಯ ಆಗುತ್ತಲೇ ಇದೆ. ನಮಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಬಿಜೆಪಿಯ ಸಂಸದರು ಮತ್ತು ರಾಜ್ಯ ಪ್ರತಿನಿಧಿಸುವ ಕೇಂದ್ರ ಮಂತ್ರಿಗಳು ಪಾರ್ಲಿಮೆಂಟಿನಲ್ಲಿ ತುಟಿ ಬಿಚ್ಚಿ ಪ್ರಶ್ನಿಸಲಿಲ್ಲ. ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ನಾಲ್ಕು ಬಾರಿ ದೆಹಲಿಗೆ ಹೋಗಿ ಅನ್ಯಾಯ ಸರಿ ಪಡಿಸಲು ಮನವಿ ಮಾಡಿದರೂ ನರೇಂದ್ರ ಮೋದಿಯೂ ಮಾಡಲಿಲ್ಲ, ನಿರ್ಮಲಾ ಸೀತಾರಾಮನ್ ಅವರೂ ಮಾಡಲಿಲ್ಲ. ಮುಕ್ಕುಂಬಿ ಕೆರೆಗೆ ನೀರು ಹರಿಸಿದ್ದು ನಾವು. ಈಗ ಯಲಬುರ್ಗಾ ಕ್ಷೇತ್ರದ ಕೆರೆ ತುಂಬಿಸುವ ಯೋಜನೆಗೆ ₹650 ಕೋಟಿ ಹಣ ಕೊಡುತ್ತಿದ್ದೇವೆ. ಇದೂ ನಮ್ಮ- ನಿಮ್ಮ ಸರ್ಕಾರದ ಹಣ. ನಾನು ಕೊಪ್ಪಳಕ್ಕೆ ಕಾಲಿಟ್ಟಾಗಲೆಲ್ಲಾ ಮೈಸೂರಿಗೇ ಕಾಲಿಟ್ಟಷ್ಟು ಖುಷಿ ಆಗುತ್ತದೆ. ನಿಮ್ಮ ಪ್ರೀತಿಗೆ ಸದಾ ಋಣಿ. ರಾಜೀವ್ ಗಾಂಧಿ ಅವರ ಹತ್ಯೆ ಆಗದೇ ಹೋಗಿದ್ದರೆ ನಾನು ಕೊಪ್ಪಳ ಲೋಕಸಭಾ ಸದಸ್ಯ ಆಗಿರುತ್ತಿದ್ದೆ. ನಿಮ್ಮ ಪ್ರೀತಿಯ ಋಣ ನನ್ನ ಮೇಲಿದೆ‌. ಅರ್ಧ ಋಣ ತೀರಿಸಿದ್ದೇನೆ. ಉಳಿದ ಋಣವನ್ನೂ ತೀರಿಸ್ತೇನೆ ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ