14 ವರ್ಷದೊಳಗಿನ ಮಕ್ಕಳ ಮಿನಿ ಕರ್ನಾಟಕ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ
ಬೆಂಗಳೂರು: ನಮ್ಮ ಸರ್ಕಾರ ಕ್ರೀಡೆಗೆ ನಿರಂತರವಾಗಿ ಪ್ರೋತ್ಸಾಹ ಕೊಟ್ಟುಕೊಂಡೇ ಬರುತ್ತಿದೆ. ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಕ್ರೀಡೆಗಳಲ್ಲಿ ಭಾಗವಹಿಸಲು ಇಂಥಾ ಕ್ರೀಡಾಕೂಟ ಸಹಕಾರಿ ಆಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಉತ್ಸಾಹದಿಂದ ಭಾಗವಹಿಸಿ. ಕ್ರೀಡೆಯಲ್ಲಿ ಗೆಲುವು ಸೋಲಿಗಿಂತ ಭಾಗವಹಿಸುವಿಕೆ ಅತೀ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 14 ವರ್ಷದೊಳಗಿನ ಮಕ್ಕಳ ಮಿನಿ ಕರ್ನಾಟಕ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತ ಕ್ರೀಡಾಪಟುಗಳಿಗೆ ಪೊಲೀಸ್ ಇಲಾಖೆಯಲ್ಲಿ ನೇರ ನೇಮಕಾತಿ ಮಾಡಿಕೊಳ್ಳಲು ನಮ್ಮ ಸರ್ಕಾರ ನಿರ್ಧರಿಸಿದೆ. ಪೊಲೀಸ್ ಇಲಾಖೆಯಲ್ಲಿ ಶೇ.3 ರಷ್ಟು ಹುದ್ದೆಗಳು ಮತ್ತು ಇತರೆ ಇಲಾಖೆಗಳಲ್ಲಿ ಶೇ.2 ರಷ್ಟು ಹುದ್ದೆಗಳನ್ನು ನೀಡಲಾಗುತ್ತದೆ ಎಂದರು.
ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ವಿಜೇತರಾಗಿ ಪದಕ ತಂದ ಕ್ರೀಡಾ ಪಟುಗಳಿಗೆ ಉತ್ತಮ ನಗದು ಬಹುಮಾನವನ್ನೂ ನೀಡುತ್ತಿದ್ದೇವೆ. ಕ್ರೀಡಾ ಕ್ಷೇತ್ರದಲ್ಲಿ ರಾಜ್ಯ ದೇಶದಲ್ಲಿಯೇ ಮುಂಚೂಣಿಯಲ್ಲಿ ಇರಬೇಕು ಎನ್ನುವುದು ನಮ್ಮ ಬಯಕೆ. ಇದಕ್ಕೆ ಬೇಕಾದ ಎಲ್ಲ ನೆರವನ್ನು ನಾವು ನೀಡಲಿದ್ದೇವೆ ಎಂದರು.

