ಏತ ನೀರಾವರಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ
ಬೆಳಗಾವಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ 22 ಬರಪೀಡಿತ ಗ್ರಾಮಗಳ 27,462 ಹೆಕ್ಟೇರ್ ಪ್ರದೇಶಗಳಿಗೆ ನೀರು ಒದಗಿಸುವ ಬಸವೇಶ್ವರ ಏತ ನೀರಾವರಿ ಯೋಜನೆಗೆ 2017ರಲ್ಲೇ ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ಚಾಲನೆ ನೀಡಲಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಬಸವೇಶ್ವರ (ಕೆಂಪವಾಡ) ಹಾಗೂ ರಾಮದುರ್ಗಾ ತಾಲೂಕಿನ ವೀರಭದ್ರೇಶ್ವರ ಮತ್ತು ಸಾಲಾಪುರ ಏತ ನೀರಾವರಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಯೋಜನೆಗೆ ಇದುವರೆಗೆ ರೂ.1,158 ಕೋಟಿ ವೆಚ್ಚ ಮಾಡಲಾಗಿದ್ದು, ಶೇ.90ರಷ್ಟು ಕಾಮಗಾರಿಗಳು ಪೂರ್ಣಗೊಂಡಿವೆ. ಜೂನ್ ಅಂತ್ಯದವರೆಗೆ ಕಾಮಗಾರಿಯನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಯೋಜನೆ ಪೂರ್ಣಗೊಳಿಸಲು 652 ಎಕರೆ ಜಮೀನು ಭೂ ಸ್ವಾಧೀನಪಡಿಸಿಕೊಳ್ಳಬೇಕಾಗಿದ್ದು, ಭೂ ಸ್ವಾಧೀನ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಯೋಜನೆಯನ್ನು ಪೂರ್ಣಗೊಳಿಸಿ ರೈತರ ಹೊಲಗಳಿಗೆ ನೀರು ಹರಿಸಲು ಅಗತ್ಯವಿರುವ ಅನುದಾನವನ್ನು ಒದಗಿಸಲಾಗುವುದು. ರಾಮದುರ್ಗಾ, ಮುಧೋಳ ಹಾಗೂ ಬಾದಾಮಿ ತಾಲೂಕುಗಳ ಒಟ್ಟು 22 ಬರಪೀಡಿತ ಗ್ರಾಮಗಳಿಗೆ ನೀರು ಪೂರೈಸುವ ಸಾಲಾಪುರ ಏತ ನೀರಾವರಿ ಯೋಜನೆ ಶೇ.80ರಷ್ಟು ಕಾಮಗಾರಿ ಪೂರ್ಣಗೊಂಡಿದ್ದು, ಇದನ್ನು ಪೂರ್ಣಗೊಳಿಸಲು ಅನುದಾನ ಒದಗಿಸಲಾಗುವುದು. ಇದೇ ರೀತಿ ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಗಳ ಒಟ್ಟು 34 ಬರಪೀಡಿತ ಗ್ರಾಮಗಳಿಗೆ ನೀರು ಒದಗಿಸುವ ವೀರಭದ್ರೇಶ್ವರ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

