ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಹಾಗೂ ರೈಲ್ವೆ ಯೋಜನೆಗಳ ಭೂಸ್ವಾಧೀನ ಕುರಿತ ಪ್ರಗತಿ ಪರಿಶೀಲನಾ ಸಭೆ
ಬೆಂಗಳೂರು: ಕೃಷ್ಣಾದಲ್ಲಿ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಹಾಗೂ ರೈಲ್ವೆ ಯೋಜನೆಗಳ ಭೂಸ್ವಾಧೀನ ಕುರಿತು ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಸೂಚನೆಗಳು:
ರಾಜ್ಯದಲ್ಲಿ ಅನುಮೋದನೆಗೊಂಡಿರುವ ಎಲ್ಲಾ ರೈಲು ಯೋಜನೆಗಳಿಗೆ ಒಟ್ಟು 16,554 ಎಕರೆ ಭೂಮಿ ಅವಶ್ಯಕತೆ ಇರುತ್ತದೆ. ಇದರ ಪೈಕಿ ಶೇಕಡಾ 84% ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಇನ್ನೂ ಅಂದಾಜು 2,685 ಎಕರೆಗಳಷ್ಟು ಭೂಮಿ ಸ್ವಾಧೀನ ಪಡಿಸಿಕೊಳ್ಳಬೇಕಿದೆ.
ರಾಜ್ಯದಲ್ಲಿ ಪ್ರಗತಿಯಲ್ಲಿರುವ ವಿವಿಧ ರೈಲ್ವೆ ಯೋಜನೆಗಳಿಗೆ ರಾಜ್ಯ ಸರ್ಕಾರದಿಂದ ನಿರ್ಮಾಣ ಕಾಮಗಾರಿಗಳಿಗೆ ರೂ.2,581.67 ಕೋಟಿ, ಭೂಸ್ವಾಧೀನ ಪ್ರಕ್ರಿಯೆಗೆ ರೂ. 2950.22 ಕೋಟಿ ಬಿಡುಗಡೆ ಮಾಡಲಾಗಿದೆ.
ರಾಜ್ಯದಲ್ಲಿ ಒಟ್ಟು 6 ವಿಮಾನ ನಿಲ್ದಾಣಗಳ ಕಾಮಗಾರಿಗಳು ಅನುಷ್ಠಾನದ ವಿವಿಧ ಹಂತದಲ್ಲಿವೆ. ಹಾಸನ ವಿಮಾನ ನಿಲ್ದಾಣ ಭೂ ಸ್ವಾಧೀನ ಪರಿಹಾರವನ್ನು ರೈತರಿಗೆ ಆದಷ್ಟು ಬೇಗನೆ ವಿತರಿಸಬೇಕು. ಎಲ್ಲಾ ವಿಮಾನ ನಿಲ್ದಾಣಗಳ ಕಾಮಗಾರಿಗಳನ್ನು ಪೂರ್ಣಗೊಳಿಸಲು ಇರುವ ಎಲ್ಲಾ ತಾಂತ್ರಿಕ ಅಡಚಣೆಗಳನ್ನು ನಿವಾರಿಸಬೇಕು.
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಒಟ್ಟು 17,350 ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿ ಮಾಡಿದ್ದು, ಇನ್ನೂ 76,430 ಮೆಟ್ರಿಕ್ ಟನ್ ಖರೀದಿಸಲು ಬಾಕಿಯಿದೆ. ಒಟ್ಟು 93,782 ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಗೆ ಇಂಡೆಂಟ್ ಪಡೆಯಲಾಗಿದ್ದು, ನಿಗದಿತ ಪ್ರಮಾಣದ ಮೆಕ್ಕೆಜೋಳ ಖರೀದಿಗೆ ಕ್ರಮ ಕೈಗೊಳ್ಳಬೇಕು
ಎಥೆನಾಲ್ ಖರೀದಿ ಕುರಿತಾಗಿ ಕೇಂದ್ರ ಸರ್ಕಾರಕ್ಕೆ ಮಾಡಿದ್ದ ಮನವಿಗೆ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿರುವುದಿಲ್ಲ. ಕೇಂದ್ರ ಸರ್ಕಾರ ರಾಜ್ಯದ ಮೆಕ್ಕೆಜೋಳ ಬೆಳೆಗಾರರ ಕುರಿತು ನಕಾರಾತ್ಮಕ ಧೋರಣೆಯನ್ನು ಮುಂದುವರೆಸಿದೆ. ಈ ಹಿನ್ನೆಲೆಯಲ್ಲಿ ಇಂಡೆಂಟ್ ನಿಗದಿಪಡಿಸಿರುವ ಪ್ರಮಾಣದಷ್ಟು ಮೆಕ್ಕೆಜೋಳ ಖರೀದಿಗೆ ಸ್ಥಳೀಯ ಸಂಸ್ಥೆಗಳು ಕ್ರಮ ಕೈಗೊಳ್ಳಬೇಕು ಎಂದರು.

