ಬೆಂಗಳೂರು: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಕಾರ್ಯಪಾಲಕ ಇಂಜಿನಿಯರ್ ಅವರನ್ನು ಅಮಾನತುಗೊಳಿಸಿ, ನೋಟೀಸ್ ಜಾರಿ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ನಿನ್ನೆ ಸುರಿದ ಭಾರಿ ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆಯ ಗೋಡೆ ಕುಸಿದು, ಏಳು ಮಂದಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಇಂದು ನಡೆದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಆಯುಕ್ತರುಗಳ ಜೊತೆ ಸಭೆ ನಡೆಸಿ ಮಾತನಾಡಿದ ಅವರು, ಗೋಡೆಗೆ ಹಾನಿಯಾಗುವಂತೆ ಮಣ್ಣು ಸುರಿದದ್ದನ್ನು ಆಸ್ಪತ್ರೆ ಮುಖ್ಯಸ್ಥರು ಏಕೆ ಗಮನಿಸಿಲ್ಲ. ಇದು ಮೇಲ್ನೋಟಕ್ಕೆ ಕರ್ತವ್ಯಲೋಪದಂತೆ ಕಾಣುತ್ತಿದ್ದು, ಈ ಸಂಬಂಧ ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್ ನೀಡಬೇಕು ಎಂದು ಹೇಳಿದರು.
ಬೆಂಗಳೂರಿನಲ್ಲಿ ಗುಂಡಿಗಳನ್ನು ಮುಚ್ಚಲು ಕೂಡಲೇ ಕ್ರಮ ಕೈಗೊಳ್ಳಬೇಕು. ನಿನ್ನೆ ಬೆಂಗಳೂರಿನಲ್ಲಿ ಸುರಿದ ಮಳೆಯಿಂದ ಸಾಕಷ್ಟು ಹಾನಿಯಾಗಿದ್ದು, 250 ಕ್ಕೂ ಹೆಚ್ಚು ಮರಗಳು ಬಿದ್ದಿವೆ. ಏಳು ಜನ ಸಾವನ್ನಪ್ಪಿದ್ದಾರೆ. ಈಗಾಗಲೇ ಸತ್ತವರ ಕುಟುಂಬದವರಿಗೆ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ಗಾಯಗೊಂಡವರಿಗೆ ಉಚಿತ ಚಿಕಿತ್ಸೆ ನೀಡುವಂತೆ ಸೂಚಿಸಲಾಗಿದೆ ಎಂದರು.
ಮುಂಗಾರು ಮಳೆ ಪ್ರಾರಂಭವಾಗುವ ಮೊದಲೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಬೆಂಗಳೂರಿನ ಐದೂ ವಲಯಗಳ ಆಯುಕ್ತರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಒಣಗಿರುವ ಅಪಾಯಕಾರಿ ಮರಗಳ ರೆಂಬೆಗಳನ್ನು ಈಗಲೇ ಕತ್ತರಿಸಬೇಕು ಎಂದರು.
ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು ರಾಜಕಾಲುವೆಗಳಲ್ಲಿ ಹೂಳು ತೆಗೆದು, ಪ್ರವಾಹ ಉಂಟಾಗದಂತೆ ಕ್ರಮ ತೆಗೆದುಕೊಳ್ಳಬೇಕು. ಮಳೆಯಿಂದ ರಸ್ತೆಯಲ್ಲಿ ಬಿದ್ದಿರುವ ಕಸ, ರೆಂಬೆಗಳನ್ನು ಕೂಡಲೇ ತೆರವು ಮಾಡಬೇಕು. ಅಂಡರ್ ಪಾಸ್ ಗಳಲ್ಲಿ ಮಳೆ ನೀರು ನಿಲ್ಲದಂತೆ ಹಾಗೂ ನೀರು ನಿಂತ ಅಂಡರ್ ಪಾಸ್‌ಗಳನ್ನು ಜನ ಬಳಸದಂತೆ ಕೂಡಲೇ ಬ್ಯಾರಿಕೇಡ್ ಹಾಕಬೇಕು ಎಂದು ತಿಳಿಸಿದರು.

