ಹಾವೇರಿ: ರಾಜಕಾರಣದಲ್ಲಿ ಇರಬೇಕಾದರೆ ಜನರ ಆಶೀರ್ವಾದ ಇರಬೇಕು. ಅವರ ಆಶೀರ್ವಾದದಿಂದ ಇಲ್ಲಿಯವರೆಗೂ ಸಾಗಿ ಬಂದಿದ್ದು, ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ. ನನ್ನ ಆಡಳಿತದ ಬಗ್ಗೆ ನನಗೆ ತೃಪ್ತಿ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಹೇಳಿದರು.
ಹಾವೇರಿ ವೈದ್ಯಕೀಯ ಕಾಲೇಜು ಪೂರ್ಣಗೊಂಡಿದ್ದು, ಇದಕ್ಕೆ ಸುಮಾರು 500 ಕೋಟಿಗಳು ವೆಚ್ಚವಾಗಿದೆ. ಇದನ್ನು ನಾನೇ ಘೋಷಣೆ ಮಾಡಿದ್ದೆ ಹಾಗೂ ಉದ್ಘಾಟನೆಯನ್ನು ನಾನೇ ಮಾಡುತ್ತಿದ್ದೇನೆ. ಈಗಾಗಲೇ ಮೂರನೇ ಬ್ಯಾಚ್ ನಡೆಯುತ್ತಿದೆ ಎಂದರು.
ಕೇಂದ್ರ ಸರ್ಕಾರವೇ ಜಿಎಸ್.ಟಿ ಜಾರಿಗೆ ತಂದು ಎಂಟು ವರ್ಷ 24% ತೆರಿಗೆ ಸುಲಿಗೆ ಮಾಡಿ ನಂತರ ನಾವು ತೆರಿಗೆ ಕಡಿಮೆ ಮಾಡಿದ್ದೇವೆ ಎಂದರು. ಕರ್ನಾಟಕ ರಾಜ್ಯವೊಂದಕ್ಕೆ ಒಂದು ವರ್ಷಕ್ಕೆ 10 ರಿಂದ 12 ಸಾವಿರ ಕೋಟಿ ರೂ.ಕಡಿಮೆಯಾಗಿದೆ. ಈ ವರ್ಷ 5 ರಿಂದ 6 ಸಾವಿರ ಕೋಟಿ ನಷ್ಟವಾಗುತ್ತದೆ. ಇದಕ್ಕೆಲ್ಲ ಯಾರು ಹೊಣೆ? ನಾಲ್ಕೂವರೆ ಲಕ್ಷ ಕೋಟಿ ತೆರಿಗೆಯನ್ನು ನಾವು ಕೊಡುತ್ತೇವೆ. ನಮಗೆ ಕೊಡುವುದು 60ರಿಂದ 70 ಸಾವಿರ ಕೋಟಿ ಮಾತ್ರ. ಒಂದು ರೂ. ಕೊಟ್ಟರೆ 14 ಪೈಸೆ ವಾಪಸ್ಸು ಬರುತ್ತದೆ ಎಂದು ತಿಳಿಸಿದರು.
ಭದ್ರಾ ಮೇಲ್ದಂಡೆ ಯೋಜನೆಗೆ ₹5,300 ಕೋಟಿ ಕೊಡಲಿಲ್ಲ. ₹5,495 ಕೋಟಿ ರಾಜ್ಯಕ್ಕೆ ಒದಗಿಸಲು 15ನೇ ಹಣಕಾಸು ಆಯೋಗ ಶಿಫಾರಸು ಮಾಡಿತ್ತು. ಅದನ್ನೂ ಕೊಡಲಿಲ್ಲ. ಪೆರಿಫೆರಲ್ ರಿಂಗ್ ರೋಡಿಗೆ ₹3,000 ಕೋಟಿ, ಬೆಂಗಳೂರಿನ ಕೆರೆಯ ಅಭಿವೃದ್ಧಿಗೆ ₹3,000 ಕೋಟಿ ಕೊಡಲಿಲ್ಲ. ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿದ್ದರೂ ವೈದ್ಯಕೀಯ ಕಾಲೇಜನ್ನು ಏಕೆ ಪೂರ್ಣಗೊಳಿಸಲಿಲ್ಲ? ಇದನ್ನು ನಾವು ಅಧಿಕಾರಕ್ಕೆ ಬಂದು ಪೂರ್ಣಗೊಳಿಸಿದ್ದೇವೆ.
ನಿನ್ನೆ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಭೇಟಿ ನೀಡಿ, ಬಳ್ಳಾರಿಯ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಮಾತನಾಡಿದ್ದಾರೆ. ಗಲಾಟೆಯಾಗಿ ಒಬ್ಬ ವ್ಯಕ್ತಿ ಸಾಯಲು ಬ್ಯಾನರ್‌ನ್ನು ಬಿಚ್ಚಿಹಾಕಿದ್ದು ಪ್ರಚೋದನೆ ನೀಡಿದೆ. ಬಿಜೆಪಿಯವರಿಗೆ ಅಸೂಯೆ ತಡೆಯಲು ಆಗುತ್ತಿಲ್ಲ ಎಂದರು.
ಸುಜಾತ ಹಂಡೆ ಎಂಬ ಮಹಿಳೆಯನ್ನು ಪೊಲೀಸರು ಬಂಧಿಸಲು ಹೋಗಿದ್ದ ಸಂದರ್ಭದಲ್ಲಿ ಮಹಿಳೆಯೇ ಸ್ವತಃ ಬಟ್ಟೆಹರಿದುಕೊಂಡಿದ್ದಾರೆ. ಆಕೆಯ ಮೇಲೆ ಎಫ್ಐಆರ್ ಆಗಿದ್ದು ಪೊಲೀಸರು ವಿಚಾರಣೆಗೆ ಹೋಗಿದ್ದ ಸಂದರ್ಭದಲ್ಲಿ ಮಹಿಳಾ ಪೊಲೀಸರನ್ನು ಕಚ್ಚಿದ್ದಾರೆ. ಹತ್ತು ಜನಕ್ಕೂ ಹೆಚ್ಚು ಮಹಿಳಾ ಪೊಲೀಸರಿದ್ದರು. ಕಾನೂನನ್ನು ಯಾರೂ ಕೈಗೆ ತೆಗೆದುಕೊಳ್ಳಬಾರದು. ಹಾಗೆ ಮಾಡಿದವರ ಮೇಲೆ ಕಾನೂನಿನ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

